ಏ. 22 ರಿಂದ ದ್ವಿತೀಯ ಪಿಯುಸಿ ಆರಂಭ: 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
e-ಸುದ್ದಿ: ಬೆಂಗಳೂರು
ರಾಜ್ಯದಲ್ಲಿ ಏ.22 ರಿಂದ ಆರಂಭವಾಗಲಿರುವ 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೊಂದಣಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.
ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸುದ್ದಿಗೋಷ್ಠಿ ಕರೆದಿದ್ದ ಸಚಿವರು, ರಾಜ್ಯದಲ್ಲಿ ಏ. 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಒಳಗೊಂಡಂತೆ ರಾಜ್ಯದ 1 ಸಾವಿರಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,84,255 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಅದರಲ್ಲಿ 600519 ವಿದ್ಯಾರ್ಥಿಗಳು ರೆಗ್ಯುಲರ್ ವಿದ್ಯಾರ್ಥಿಗಳು, 61808 ಪುನರಾವರ್ತಿತ, ಖಾಸಗಿಯಾಗಿ ನೋಂದಣಿ ಮಾಡಿರುವ 21928 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಬಾಲಕ – ಬಾಲಕಿಯರು: ಪ್ರಸಕ್ತ ಸಾಲಿನಲ್ಲಿ 3,46.936 ಬಾಲಕರು ಮತ್ತು 3,37,319 ಬಾಲಕಿಯರು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅದರಲ್ಲಿ ಕಲಾ ವಿಭಾಗದಲ್ಲಿ 2.28 167 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2, 45, 519, ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ: ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ PUಅ ಪರೀಕ್ಷೆ ನಡೆಯಲಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 83 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ರಾಮನಗರದಲ್ಲಿ ಅತಿ ಕಡಿಮೆ ಪರೀಕ್ಷಾ ಕೇಂದ್ರಗಳು 13 ರಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಸಿಸಿಟಿವಿ ಭದ್ರತೆ: ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳನ್ನು ಎಲ್ಲಾ ಜಿಲ್ಲೆಯ ಖಜಾನೆಗಳಲ್ಲಿ ಠೇವಣಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ಚಟುವಟಿಕೆ ಮಾಡಲಾಗಿದೆ. ಇದಕ್ಕೆ ಸಿಸಿಟಿವಿ 24x 7 ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ.
ಮೊಬೈಲ್ ನಿಷೇಧ: ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಇಟ್ಟುಕೊಳ್ಳಲು ಅನುಮತಿ ನೀಡಲಾಗಿದೆ. ಉಳಿದ ಎಲ್ಲಾ ಪರೀಕ್ಷಾ ಕೇಂದ್ರದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ತರುವುದು ನಿಷೇಧ ಮಾಡಲಾಗಿದೆ.
ಸ್ಪೆಷಲ್ ಜಾಗೃತ ದಳ: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮ ನಡೆಯದಂತೆ ತಡೆಯಲು ವಿಶೇಷ ಜಾಗೃತ ದಳ ರಚನೆ ಮಾಡಲಾಗಿದೆ. ವಿಶೇಷ ಜಾಗೃತ ದಳದ ತಂಡಗಳು 2152, ತಾಲೂಕು ಮಟ್ಟದ ಜಾಗೃತ ದಳ 858 , ಜಿಲ್ಲಾ ಮಟ್ಟದ ಜಾಗೃತ ದಳ 64 ಗಳನ್ನು ರಚನೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಇನ್ನು ಪರೀಕ್ಷೆಗೆ ಸಂಪೂರ್ಣ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜತೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸರ್ಕಾರಿ ಬಸ್‌ನಲ್ಲಿ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದು.