ನ.26ರಂದು ಕಾರ್ಮಿಕ ಸಂಘಟನೆಗಳ ಮುಷ್ಕರ

e- ಸುದ್ದಿ ಮಾನ್ವಿ:
‘ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ನ.26ರಂದು ಮಾನ್ವಿ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಶರ್ಪುದ್ದೀನ್ ಪೋತ್ನಾಳ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಕೇಂದ್ರ ಸರ್ಕಾರ ನಿರಂತರವಾಗಿ ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಶಿಕ್ಷಣ, ಆರೋಗ್ಯ, ರೈಲ್ವೆ, ದೂರ ಸಂಪರ್ಕ ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುತ್ತಿದೆ. ಕೇಂದ್ರ ಸರ್ಕಾರ ಈ ಎಲ್ಲಾ ನಿರ್ಧಾರಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಕಾರ್ಮಿಕ ಸಂಘಟನೆಗಳಿಂದ ನ.26ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುತ್ತಿದೆ. ಕಾರಣ ಮಾನ್ವಿಯಲ್ಲಿಯೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಅವರು ತಿಳಿಸಿದರು.
‘ಆದಾಯ ತೆರಿಗೆ ವ್ಯಾಪ್ತಿಯ ಹೊರಗಿರುವ ಕುಟುಂಬಗಳಿಗೆ ಪ್ರತಿ ತಿಂಗಳು ರೂ.7,500 ಸಹಾಯ ಧನ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 200ದಿನಗಳ ಕೆಲಸ ನೀಡಬೇಕು. ಸರ್ಕಾರಿ ನೌಕರರಿಗೆ ಎನ್‍ಪಿಎಸ್ ಪದ್ಧತಿ ರದ್ದುಗೊಳಿಸಿ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು. ‘ ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ತಾಲ್ಲೂಕಿನ ಎಲ್ಲಾ ಪ್ರಗತಿಪರರು, ಸಂಘ ಸಂಸ್ಥೆಗಳ ಸದಸ್ಯರು ಬೆಂಬಲಿಸಿ ಯಶಸ್ವಿಗೊಳಿಸಬೇಕು’ ಎಂದು ಅವರು ಕೋರಿದರು.
ಎಐಟಿಯುಸಿ ಮುಖಂಡರಾದ ಸಂಗಯ್ಯ ಸ್ವಾಮಿ ಚಿಂಚರಕಿ, ಎಂ.ಬಿ.ಸಿದ್ರಾಮಯ್ಯ ಸ್ವಾಮಿ, ಆಶಾ ಕಾರ್ಯಕರ್ತೆಯರ ಸಂಘದ ಗೌರವಾಧ್ಯಕ್ಷ ಚನ್ನಬಸವ ಜಾನೇಕಲ್, ವಿವಿಧ ಸಂಘಟನೆಗಳ ಪ್ರಮುಖರಾದ ರುದ್ರಪ್ಪ ನಾಯಕ, ಸಿದ್ದಲಿಂಗಯ್ಯ, ಚೆನ್ನಮ್ಮ, ಲಲಿತಾ, ಟಿ.ರಾಧಾ, ನರಸುಬಾಯಿ ಮತ್ತಿತರರು ಇದ್ದರು.

Don`t copy text!