ಶಾಸಕರಾಗಿ ಬಸನಗೌಡ ತುರ್ವಿಹಾಳ ಪ್ರಮಾಣ ವಚನ ಸ್ವಿಕಾರ
e-ಸುದ್ದಿ, ಬೆಂಗಳೂರು
ಇತ್ತೀಚೆಗೆ ನಡೆದ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಮಸ್ಕಿ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸನಗೌಡ ತುರ್ವಿಹಾಳ ಹಾಗೂ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗಾರ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು.
ಇಬ್ಬರು ಶಾಸಕರು ಸತ್ಯ, ನ್ಯಾಯ, ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ನೂತನ ಶಾಸಕರು:
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಬಿಜೆಪಿ ಸೇರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು.
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಲಗಾರ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಅವರನ್ನು ಪರಭಾವಗೊಳಿಸಿದ್ದರು. ಈ ಹಿಂದೆ ಶಾಸಕರಾಗಿದ್ದ ನಾರಾಯಣರಾವ್ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.