ಯರಗುಂಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ

ಯರಗುಂಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ

e-ಸುದ್ದಿ ಲಿಂಗಸುಗೂರು

ಯರಗುಂಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ ನೀಡಲಾಯಿತು.
ಕಂದಾಯ ಇಲಾಖೆಯ ವತಿಯಿಂದ ಜಿಲ್ಲೆಯ ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ರಾಯಚೂರು ಜಿಲ್ಲಾಧಿಕಾರಿಗಳಾದ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ಶನಿವಾರದಂದು ಲಿಂಗಸೂಗೂರು ತಾಲೂಕಿನ ಯರಗುಂಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳೊಂದಿಗೆ ಜ್ಯೋತಿ ಬೆಳಗುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮವನ್ನು 10.30 ರ ಸುಮಾರಿಗೆ ನಿಗದಿಪಡಿಸಲಾಗಿತ್ತು ಆದರೆ ಜಿಲ್ಲಾಧಿಕಾರಿಗಳ ಬರುವಿಕೆ ವಿಳಂಬವಾಗಿದ್ದರಿಂದ ತಾಲೂಕು ಅಧಿಕಾರಿಗಳು, ಗ್ರಾಮಸ್ಥರು ಕಾದು ಕಾದು ಸುಸ್ತಾಗಿದ್ದರು. ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ಬೆಸರ ವ್ಯಕ್ತಪಡಿಸಿದ ಪ್ರಸಂಗ ಜರುಗಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಹಟ್ಟಿ ಚಿನ್ನದ ಗಣಿ ನಿಗಮ ನಿಯಮಿತ ಅಧ್ಯಕ್ಷರಾದ ಮಾನಪ್ಪ ಡಿ.ವಜ್ಜಲ್ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ಜಿಲ್ಲೆಯ ಪ್ರತಿಯೊಬ್ಬ ರೈತರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಿರುವ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮವು ಮಹತ್ವದ ಪಾತ್ರ ವಹಿಸಿದೆ ಎಂದರು.

ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾಮ ಪಂಚಾಯತ್ ಸದಸ್ಯರು ರಾಜಕೀಯ ಮಾಡದೆ ಗ್ರಾಮ ಪಂಚಾಯತಗಳಿಗೆ ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಮಗಳ ಅಭಿವೃದ್ಧಿ ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ಮಾತನಾಡಿ, ವೃದ್ಧಾಪ್ಯಾ ವೇತನ, ವಿಧವಾ ಹಾಗೂ ಅಂಗವಿಕಲರ ವೇತನಕ್ಕೆ ಅರ್ಹರಿರುವ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಮಾಸಾಶನ ಮಂಜೂರಿ ಮಾಡಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಕಂದಾಯ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಗ್ರಾಮಸ್ಥರಿಂದ ಹಲವಾರು ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು, ಕಂದಾಯ, ಗ್ರಾಮ ಪಂಚಾಯತಿ, ಆಹಾರ, ಲೋಕೋಪಯೋಗಿ, ಭೂ ಮಾಪನ, ಕೃಷಿ, ತೋಟಗಾರಿಕೆ, ಶಿಕ್ಷಣ, ಪಶುಸಂಗೋಪನೆ, ವಿಕಲಚೇತನ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬಂಧಿಸಿದ 85 ಅರ್ಜಿಗಳನ್ನು ಗ್ರಾಮಸ್ಥರು ಸಲ್ಲಿಸಿದ್ದಾರೆ. ಇವುಗಳಲ್ಲಿ 32 ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಮಟ್ಟದಲ್ಲಿ ಅರ್ಜಿಗಳು ಬಂದಿವೆ. ಗ್ರಾಮಸ್ಥರು ಗ್ರಾಮದಲ್ಲಿ ಶೌಚಗೃಹ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಸ್ಥಾಪನೆಗೆ ಪ್ರಸ್ತಾವನೆ ಬಂದಿದ್ದು ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.


ಗ್ರಾಮದಲ್ಲಿ ಹಬ್ಬದ ವಾತಾವರಣ: ಜಿಲ್ಲಾಧಿಕಾರಿಗಳ ಭೇಟಿ ಹಿನ್ನಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟು ವ್ಯವಸ್ಥೆಯನ್ನು ಕೈಗೊಂಡಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣವಿತ್ತು. ಗ್ರಾಮದ ಹೆಣ್ಣು ಮಕ್ಕಳು ಪೂರ್ಣ ಕುಂಭಗಳೊಂದಿಗೆ ಗ್ರಾಮಸ್ಥರು ಎತ್ತಿನ ಬಂಡಿ ಕಟ್ಟಿ ಜಿಲ್ಲಾಧಿಕಾರಿಗಳನ್ನು ಬರ ಮಾಡಿಕೊಂಡರು. ಗ್ರಾಮದ ಆರಾಧ್ಯ ದೇವರಾದ ಶ್ರೀಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿದ ಅಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿಗಳ ಕೆ.ಆರ್.ದುರುಗೇಶ್, ಲಿಂಗಸುಗೂರು ತಹಶೀಲ್ದಾರ್ ಬಲರಾಮ ಕಟ್ಟಿಮನಿ,ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಮ್ಮ ಕಾರನೂರು ,
ಸಮಾಜ ಕಲ್ಯಾಣಾಧಿಕಾರಿ ರಾಜೇಂದ್ರಕುಮಾರ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ, ಜಿಲ್ಲಾ ಪಂಚಾಯಿತಿ ಉಪವಿಭಾಗ ಶಿವಕುಮಾರ , ಪಶುವೈದ್ಯಾಧಿಕಾರಿ ರಾಚಪ್ಪ ,ಗೋರೆಬಾಳ ಗ್ರಾಮ ಪಂಚಾಯತ ಪಿಡಿಓ ಮಹೇಶ್, ಅಧ್ಯಕ್ಷರು ,ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

Don`t copy text!